About the Author

ಹಾಡ್ಲಹಳ್ಳಿ ನಾಗರಾಜು ಅವರು ಮೂಲತಃ ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಗ್ರಾಮದವರು. ತಂದೆ- ಗುರುಶಾಂತೇಗೌಡರು, ತಾಯಿ- ಪುಟ್ಟಮ್ಮ. ಕಡುಬಡತನದ ರೈತಾಪಿ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ ಪದವೀಧರರಾಗಿದ್ದು, ಎನ್.ಸಿ.ಸಿ ಇಲಾಖೆಯಲ್ಲಿ 36 ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಯಿಂದಾಗಿ ಮುಖ್ಯಮಂತ್ರಿಗಳ ಶ್ಲಾಘನಾಪತ್ರಕ್ಕೆ ಪಾತ್ರರಾಗಿದ್ದಾರೆ. ಎನ್.ಸಿ.ಸಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಂತರ ಅದೇ ಇಲಾಖೆಯಲ್ಲಿ ಗೆಜೆಟೆಡ್ ಅಧಿಕಾರಿಯಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಹಾಸನ ನಗರ ಸಮೀಪ ಅತ್ತಿಹಳ್ಳಿ ಎಂಬ ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪಟ ಮಲೆನಾಡಿನ ಪರಿಸರದಲ್ಲಿ ಹುಟ್ಟಿಬೆಳೆದ ನಾಗರಾಜು ಅವರು ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪುಮೂಡಿಸಿದ್ದಾರೆ. ದೇವರಬೆಟ್ಟ, ಗುದ್ದಿನಿಂದ ತೆಗೆದ ಹೆಣ, ನಕ್ರ ಹಾಗೂ ನಾನು, ಕುಂಭದ್ರೋಣ (ಕತಾಸಂಕಲನಗಳು), ಬಾಡಿಗೆಬಂಟರು, ಬಿಂಗಾರೆಕಲ್ಲು, ಬೆಂಕಿಯಸುಳಿ, ಗೃಹ ಪುರಾಣ, ಕಡವೆಬೇಟೆ, ನಿಲುವಂಗಿಯ ಕನಸು ಕಾದಂಬರಿಗಳು ಪ್ರಕಟವಾಗಿವೆ. ‘ಕಾಡುಹಕ್ಕಿಯ ಹಾದಿನೋಟ’ ಎಂಬ ಆತ್ಮಕಥನ ಸ್ವರೂಪದ ಪ್ರಬಂಧ ಸಂಕಲನವಾಗಿದೆ. ಸುಮಾರು ನಾಲ್ಕು ದಶಕಗಳಿಂದಲೂ ಮಿತ್ರರೊಡಗೂಡಿ ಹಾಸನದಲ್ಲಿ ಹೊಯ್ಸಳ ಕಲಾ ಸಂಘ ಎಂಬ ಸಾಂಸ್ಕ್ರತಿಕ ಸಂಘಟನೆ ನಡೆಸುತ್ತಿದ್ದು, ಸಾಹಿತ್ಯಿಕ ಚಟುವಟಿಕೆ, ನಾಟಕ ಹಾಗೂ ಜನಪದಗೀತಗಾಯನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆಕಾಶವಾಣಿಯಲ್ಲಿ ಸಾಧಕರೊಟ್ಟಿಗೆ ಸಂವಾದ ಸೇರಿದಂತೆ ಚಿಂತನ ಮುಂತಾದ ಕಾರ್ಯಕ್ರಮಗಳು ಪ್ರಸಾರವಾಗಿದೆ. ಸಾಹಿತ್ಯ ಕ್ಷೇತ್ರದ ಸೇವೆಯಲ್ಲಿ ಗಮನಿಸಿ ಅವರಿಗೆ ಸಾಹಿತ್ಯ ಪ್ರಕಾರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ಕಿರಂ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಹಾಡ್ಲಹಳ್ಳಿ ನಾಗರಾಜ್

BY THE AUTHOR