About the Author

ಜಯಶ್ರೀನಿವಾಸ ರಾವ್ ಅವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ ಪದ್ಯಗಳನ್ನು ಅನುವಾದ ಮಾಡುತ್ತಾರೆ. ಕನ್ನಡದ ಮೊದಲ ಸಾಮಾಜಿಕ ಕಾದಂಬರಿಗಳಲ್ಲಿ ಒಂದಾದ ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಶ್ರೀ ಸುಬ್ರಾಯ ಚೊಕ್ಕಾಡಿಯವರ ಕವನಗಳ ಇಂಗ್ಲಿಷ್ ಅನುವಾದಗಳು ‘ಅನಿಕೇತನ’ (ಇಂಗ್ಲಿಷ್) ದಲ್ಲಿ ಪ್ರಕಟವಾಗಲಿದೆ. ಇವರು ಕನ್ನಡಕ್ಕೆ ಅನುವಾದ ಮಾಡಿದ ಖ್ಯಾತ ವಿದೇಶಿ ಕವಿಗಳ ಕವನಗಳು ಕನ್ನಡ ಸಾಹಿತ್ಯ ಪತ್ರಿಕೆಗಳಾದ ‘ಅವಧಿ’, ಕೆಂಡಸಂಪಿಗೆ, ಹಾಗೂ ‘ಋತುಮಾನ’ ದಲ್ಲಿ ಪ್ರಕಟವಾಗಿವೆ. ‘ದ ಹಿಂದು’ ದಿನಪತ್ರಿಕೆಯು ಇವರು ಇಂಗ್ಲಿಷಿನಲ್ಲಿ ಬರೆದ ಕನ್ನಡ ಅರುಣೋದಯ ಸಾಹಿತ್ಯದ ಮೇಲಿನ 15 ಲೇಖನಗಳ ಸರಣಿಯನ್ನು ಜನವರಿ-ಡಿಸೆಂಬರ್ 2020ರ ಅವಧಿಯಲ್ಲಿ ಪ್ರಕಟಿಸಿತ್ತು. ಜಯಶ್ರೀನಿವಾಸ ರಾವ್ ಅವರು ಕನ್ನಡ ಅರುಣೋದಯ ಸಾಹಿತ್ಯ ಹಾಗೂ ಅನುವಾದ ವಿಷಯಗಳ ಬಗ್ಗೆ ಬರೆದ ಪ್ರಬಂಧಗಳು ದೇಶದ ಹೆಸರಾಂತ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ. ಜಯಶ್ರೀನಿವಾಸ ರಾವ್ ಅವರು ಅನುವಾದಿಸಿದ ಪೋಲಿಷ್ ಕವನಗಳ ಸಂಕಲನ, “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು’,’ ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗವು ಏಪ್ರಿಲ್ 2022ರಲ್ಲಿ ಪ್ರಕಟಿಸಿತು.

ಎಸ್. ಜಯಶ್ರೀನಿವಾಸ ರಾವ್