ಡಬ್ಬಿಂಗ್‌ ಪರ ಬ್ಯಾಟಿಂಗ್‌ ಮಾಡಿದ ಚಂದ್ರಶೇಖರ ಕಂಬಾರ

Date: 05-02-2020

Location: ಕಲಬುರಗಿ


ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ)

ಜ್ಞಾನ ಹರಡುವ ಇಂಗ್ಲಿಷ್‌ ಚಾನೆಲ್‌ಗಳನ್ನು ಕನ್ನಡಕ್ಕೆ ಅಳವಡಿಸಲು ಪ್ರೋತ್ಸಾಹ ನೀಡಬೇಕು ಎಂದು ಹಿರಿಯ ಕವಿ-ನಾಟಕಕಾರ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.

ಡಬ್ಬಿಂಗ್‌ನಿಂದಾಗಿ ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ಮಾರಕ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದು ಸರಿಯಲ್ಲ. ಜ್ಞಾನ ಹರಡುವ ಚಾನೆಲ್‌ಗಳು ಕನ್ನಡಕ್ಕೆ ಬರಲು ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.

ಜಗತ್ತಿನ ಎಲ್ಲ ಭಾಷೆಗಳೂ ಆಧುನಿಕ ಹೊಸ ತಂತ್ರಾಂಶ ಅಳವಡಿಸಿಕೊಳ್ಳುತ್ತಿವೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳದಿದ್ದರೆ ಭಾಷೆ ಬೆಳೆಯುವುದಿಲ್ಲ. ಕನ್ನಡದಲ್ಲಿ ತಂತ್ರಾಂಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಇರುವ ಅಡ್ಡಿಯನ್ನು ತೆಗೆದು ಹಾಕಲು ಸರ್ಕಾರ ಪ್ರಯತ್ನಿಸಬೇಕು ಎಂದರು.

ಇಂಗ್ಲಿಷ್‌ ಶಿಕ್ಷಣ ಬರುವವರೆಗೂ ದೇಶದಲ್ಲಿ ಸುಸಜ್ಜಿತ ಶಿಕ್ಷಣ ವ್ಯವಸ್ಥೆ ಇರಲಿಲ್ಲ. ಇಂಗ್ಲಿಷ್‌ ಶಿಕ್ಷಣದಿಂದ ದೇಶ ರೋಮಾಂಚಿತಗೊಂಡಿತು. ಇಂಗ್ಲಿಷ್‌ ಶಿಕ್ಷಣವು ಭಾರತೀಯರಿಗೆ ಕೀಳರಿಮೆಯನ್ನೂ ನೀಡಿತು. ಮೆಕಾಲೆಯ ಇಂಗ್ಲಿಷ್‌ ಶಿಕ್ಷಣವು ಉಂಟು ಮಾಡಿರುವ ಕೀಳರಿಮೆಯನ್ನ ಮೀರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಆಗುವ ಅಗತ್ಯವಿದೆ ಎಂದರು.

ಕಲ್ಯಾಣ ಕರ್ನಾಟಕ ಉತ್ಸವ:

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ಕಲ್ಯಾಣ ಕರ್ನಾಟಕ ಉತ್ಸವ ನಡೆಸಲಾಗುತ್ತದೆ ಎಂದು ಪ್ರಕಟಿಸಿದರು.

ಹೈದರಾಬಾದ್‌ ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಧ್ಯಯನ ನಡೆಸಲು ಅನುವಾಗುವಂತೆ ಬೆಂಗಳೂರಿನಲ್ಲಿ ೫೦೦ ಕೊಠಡಿಗಳ ಸುಸಜ್ಜಿತ ವಸತಿ ನಿಲಯ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

೩೭೧ಜೆ ತಿದ್ದುಪಡಿಯ ಮೀಸಲಾತಿಗೆ ಅನುಗುಣವಾಗಿ ಖಾಲಿ ಹುದ್ದೆಗಳನ್ನು ಗುರುತಿಸಲಾಗುತ್ತಿದೆ. ಶೀಘ್ರದಲ್ಲಿಯೇ ನೇಮಕಾತಿ ಮಾಡಲಾಗುತ್ತದೆ. ಹಾಗೆಯೇ ಅಪೌಷ್ಟಿಕತೆ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂದರು.

ಖಾಸಗಿ ಶಾಲೆಯಲ್ಲಿ ಕನ್ನಡ ಭಾಷೆ ಅಳವಡಿಸಲು ಯೋಜನೆ ರೂಪಿಸಲಾಗುತ್ತದೆ. ಹಾಗೆಯೇ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸಮಾಜವು ಸರ್ಕಾರದ ಜೊತೆಗೆ ಕೈಜೋಡಿಸಬೇಕು ಎಂದು ಕೋರಿದರು.

ಅಲ್ಲಲ್ಲಿ ಪ್ರತ್ಯೇಕತೆಯ ಮಾತು ಕೇಳಿ ಬರುತ್ತಿದೆ. ಏಕೀಕರಣವು ಪ್ರತ್ಯೇಕಿಕರಣಕ್ಕೆ ಒಳಗಾಗಬಾರದು. ಸರ್ಕಾರವು ನೆಲ-ಜಲ ರಕ್ಷಣೆಗೆ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಗೋವಿಂದ ಕಾರಜೋಳ ಅವರು ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತಿ ಸಚಿವ ಸಿ.ಟಿ. ರವಿ ಉಪಸ್ಥಿತರಿದ್ದರು.

 

MORE NEWS

ನಾಳೆಯಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಕ್ಷರ ಜಾತ್ರೆ

05-01-2023 ಬೆಂಗಳೂರು

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಹಾವೇರಿ ಸಜ್ಜಾಗಿದೆ. ಮೂರು ವರ್ಷಗಳ ನಂತರ ನಡೆಯುತ್ತಿರುವ ಮೂರು&n...

ಭಾರತ ಅಖಂಡವಾಗಿ ಉಳಿಯಲಿ- ಎಚ್‌ಎಸ್‌ವಿ ಆಶಯ

07-02-2020 ಕಲಬುರಗಿ

ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ) ಭಾರತವನ್ನು ಎರಡಾಗಿ ಒಡೆಯದೆ ಅಖಂಡವಾಗಿ ಉಳಿಸುವುದು ಎಲ್ಲರ ಕರ್ತವ್ಯ ಎಂದು ಸಮ...

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

06-02-2020 ಕಲಬುರಗಿ

ಕಲಬುರಗಿ: ಹಾವೇರಿಯಲ್ಲಿ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸ...